ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್‌ನ ಸ್ಕಿಲ್ ಡೆವಲಪ್‌ಮೆಂಟ್ ಸೆಂಟರ್ ವತಿಯಿಂದ, ನಿಟ್ಟೆಯ ಎನ್‌ಎಂಎಎಎಂ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಹಯೋಗ ಹಾಗೂ ಎಂ.ಆರ್.ಜಿ. ಗ್ರೂಪ್‌ನ ಪ್ರಾಯೋಜಕತ್ವದಲ್ಲಿ 5ನೇ ಬೃಹತ್ ಉದ್ಯೋಗ ಮೇಳ ಮತ್ತು ಸ್ಟಡಿ ಅಬ್ರಾಡ್ ಎಕ್ಸ್‌ಪೋ-2026 ಅ.9ರಂದು ಕುಂತಳ ನಗರದ ಆಶಾ ಪ್ರಕಾಶ್ ಶೆಟ್ಟಿ ಕನ್ವೆನ್ಶನ್ ಸೆಂಟರ್ ಹಾಗೂ ಸ್ಕಿಲ್ ಡೆವಲಪ್‌ಮೆಂಟ್ ಸೆಂಟರ್ ಆವರಣದಲ್ಲಿ ನಡೆಯಲಿದೆ ಎಂದು ಟ್ರಸ್ಟ್ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.
ಉಡುಪಿ ಪ್ರೆಸ್ ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉಡುಪಿ, ದಕ್ಷಿಣ ಕನ್ನಡ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳ ಯುವಜನರಿಗೆ ಉದ್ಯೋಗಾವಕಾಶಗಳನ್ನು ಪರಿಚಯಿಸುವುದು, ಉದ್ಯೋಗದಾತರು ಮತ್ತು ಉದ್ಯೋಗಾಕಾಂಕ್ಷಿಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವುದು ಹಾಗೂ ಅಭ್ಯರ್ಥಿಗಳ ವಿದ್ಯಾರ್ಹತೆ ಮತ್ತು ಕೌಶಲ್ಯಕ್ಕೆ ತಕ್ಕ ಉದ್ಯೋಗ ಪಡೆಯಲು ನೆರವಾಗುವುದು ಮೇಳದ ಪ್ರಮುಖ ಉದ್ದೇಶವಾಗಿದೆ ಎಂದರು.
ಈಗಾಗಲೇ ಸುಮಾರು 50 ಕಂಪನಿಗಳು ನೋಂದಾಯಿಸಿಕೊಂಡಿದ್ದು, ಸುಮಾರು 2,500 ಉದ್ಯೋಗಾವಕಾಶಗಳು ಲಭ್ಯವಾಗುವ ನಿರೀಕ್ಷೆಯಿದೆ. ವಿವಿಧ ಕ್ಷೇತ್ರಗಳ ಕಂಪನಿಗಳ ಪ್ರತಿನಿಧಿಗಳು ಸ್ಥಳದಲ್ಲೇ ಅಭ್ಯರ್ಥಿಗಳ ಸಂದರ್ಶನ ನಡೆಸಿ ನೇಮಕಾತಿ ಪ್ರಕ್ರಿಯೆ ನಡೆಸಲಿದ್ದಾರೆ ಎಂದು ಅವರು ತಿಳಿಸಿದರು.
ಯುವಜನರನ್ನು ಸ್ವಾವಲಂಬಿಗಳನ್ನಾಗಿ ರೂಪಿಸುವುದು ಮತ್ತು ಅವರ ಸಾಮರ್ಥ್ಯಕ್ಕೆ ಸೂಕ್ತ ಅವಕಾಶ ಕಲ್ಪಿಸುವುದು ಟ್ರಸ್ಟ್‌ನ ಆಶಯವಾಗಿದೆ. ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೂ ಪ್ರಮುಖ ಕಂಪನಿಗಳ ಪ್ರತಿನಿಧಿಗಳನ್ನು ನೇರವಾಗಿ ಭೇಟಿಯಾಗಿ ಸಂದರ್ಶನದಲ್ಲಿ ಭಾಗವಹಿಸುವ ಅವಕಾಶ ದೊರೆಯಬೇಕು. ಶಿಕ್ಷಣದಿಂದ ಉದ್ಯೋಗದತ್ತ ಸಾಗುವ ಯುವಜನರಿಗೆ ಈ ಮೇಳವು ಉಪಯುಕ್ತ ವೇದಿಕೆಯಾಗಲಿದೆ ಎಂದು ಅಶೋಕ್ ಕುಮಾರ್ ಶೆಟ್ಟಿ ಹೇಳಿದರು.
ಬೆಳಿಗ್ಗೆ 9ರಿಂದ ನೋಂದಣಿ
ಅಭ್ಯರ್ಥಿಗಳ ನೋಂದಣಿ ಹಾಗೂ ಸಂದರ್ಶನ ಪ್ರಕ್ರಿಯೆ ಬೆಳಿಗ್ಗೆ 9 ಗಂಟೆಗೆ ಆರಂಭವಾಗಲಿದ್ದು, ಸಂಜೆ 5 ಗಂಟೆಯವರೆಗೆ ಮೇಳ ನಡೆಯಲಿದೆ. ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ ಹಾಗೂ ಆಸಕ್ತಿಗೆ ಹೊಂದುವ ಕಂಪನಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅಗತ್ಯ ದಾಖಲೆಗಳೊಂದಿಗೆ ಸಮಯಕ್ಕೆ ಸರಿಯಾಗಿ ಆಗಮಿಸುವಂತೆ ಅವರು ಮನವಿ ಮಾಡಿದರು.

ಗಣ್ಯರಿಂದ ಉದ್ಘಾಟನೆ
ಬೃಹತ್ ಉದ್ಯೋಗ ಮೇಳವನ್ನು ಎಂ.ಆರ್.ಜಿ. ಗ್ರೂಪ್ ಅಧ್ಯಕ್ಷ ಡಾ. ಕೆ. ಪ್ರಕಾಶ್ ಶೆಟ್ಟಿ ಉದ್ಘಾಟಿಸಲಿದ್ದಾರೆ.
ಸ್ಟಡಿ ಅಬ್ರಾಡ್ ಎಕ್ಸ್‌ಪೋ-2026 ಅನ್ನು ನಿಟ್ಟೆ ವಿಶ್ವವಿದ್ಯಾಲಯದ ಚಾನ್ಸೆಲರ್ ಎನ್. ವಿಶಾಲ್ ಹೆಗಡೆ ಉದ್ಘಾಟಿಸಲಿದ್ದಾರೆ. ‘ಕೌಶಲ್ಯ ಸ್ಕಿಲ್ಸ್-2026’ ಬುಲೆಟಿನ್ ಅನ್ನು ಮಾಹೆಯ ಪ್ರೊ-ಚಾನ್ಸೆಲರ್ ಡಾ. ಎಚ್.ಎಸ್. ಬಲ್ಲಾಳ್ ಬಿಡುಗಡೆ ಮಾಡಲಿದ್ದಾರೆ ಎಂದು ಅಶೋಕ್ ಕುಮಾರ್ ಶೆಟ್ಟಿ ತಿಳಿಸಿದರು.
ಉದ್ಯೋಗ ಮೇಳದ ಜೊತೆಗೆ ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆಯಲು ಬಯಸುವ ವಿದ್ಯಾರ್ಥಿಗಳಿಗೆ ಅಗತ್ಯ ಮಾಹಿತಿ ಹಾಗೂ ಮಾರ್ಗದರ್ಶನ ಒದಗಿಸುವ ಸ್ಟಡಿ ಅಬ್ರಾಡ್ ಎಕ್ಸ್‌ಪೋ ಕೂಡ ನಡೆಯಲಿದ್ದು, ವಿದ್ಯಾರ್ಥಿಗಳು ಮತ್ತು ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಅವರು ಕರೆ ನೀಡಿದರು.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions