ಅಂಗನವಾಡಿಗಳು ಆರಂಭವಾಗಿ 50 ವರ್ಷಗಳಾಗುತ್ತಿರುವ ಹಿನ್ನೆಲೆಯಲ್ಲಿ ಅಕ್ಟೋಬರ್ 2ರ ಹೊತ್ತಿಗೆ ಸುವರ್ಣ ಮಹೋತ್ಸವ ಆಚರಿಸಲು ಸಿದ್ಧತೆ ಮಾಡಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಉಡುಪಿ ಜಿಲ್ಲಾಡಳಿತ, ಉಡುಪಿ ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾಪು ತಾಲೂಕು ಪಂಚಾಯತ್ ವತಿಯಿಂದ ಎಲ್ಲೂರಿನ ದುರ್ಗಾನಗರದಲ್ಲಿ ನೂತನವಾಗಿ ನಿರ್ಮಿಸಿರುವ ಅಂಗನವಾಡಿ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ಮಕ್ಕಳಿಗೆ ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಮತ್ತಷ್ಟು ಸದೃಢಗೊಳಿಸುವ ನಿಟ್ಟಿನಲ್ಲಿ ಎಲ್‌ಕೆಜಿ ಹಾಗೂ ಯುಕೆಜಿಯನ್ನು ಪ್ರಾರಂಭಿಸಲಾಗುತ್ತದೆ ಎಂದರು.
ರಾಜ್ಯದಲ್ಲಿ 70 ಸಾವಿರ ಅಂಗನವಾಡಿ ಕೇಂದ್ರಗಳಿದ್ದು, ಹಂತ ಹಂತವಾಗಿ ಎಲ್ಲಾ ಕೇಂದ್ರಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. ಪೂರ್ವ ಪ್ರಾಥಮಿಕ ಹಂತದಲ್ಲಿ ಎಲ್‌ಕೆಜಿ/ಯುಕೆಜಿ ಆರಂಭಿಸಲಿರುವ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೂ ಕರ್ನಾಟಕ ಪಾತ್ರವಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಸಮಾರಂಭದಲ್ಲಿ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್, ಉಪ ವಿಭಾಗಧಿಕಾರಿ ಎಸ್.ಆರ್. ರಶ್ಮಿ, ತಹಶಿಲ್ದಾರ್ ಪ್ರತಿಭಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಶ್ಯಾಮಲಾ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ© 2025 KannadaExpress. All Rights Reserved.
Design by GreyCrust Solutions