Advertisement

ಮಕ್ಕಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಪೂರಕ ವಾತಾವರಣ ಕಲ್ಪಿಸಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಮಕ್ಕಳ ರಕ್ಷಣೆಗೆ ಸಂಬಂಧಿಸಿದಂತೆ ಸರಕಾರ ಜಾರಿಗೆ ತಂದಿರುವ ಕಾಯ್ದೆ ಹಾಗೂ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಮಕ್ಕಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಪೂರಕ ವಾತಾವರಣವನ್ನು ಕಲ್ಪಿಸಬೇಕೆಂದು

ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು.

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿ ನಡೆದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವಿವಿಧ ಸಮಿತಿ ಸಭೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಮಕ್ಕಳು ತಮ್ಮ ಬಾಲ್ಯಾವಸ್ಥೆಯನ್ನು ಉತ್ತಮವಾಗಿ ಅನುಭವಿಸಿ, ಶಿಕ್ಷಣ ಸೇರಿದಂತೆ ಮತ್ತಿತರ ಬಗ್ಗೆ ಜ್ಞಾನ ಹೊಂದಿ, ವಿಕಸನ ಹೊಂದಲು ಅನುಕೂಲವಾಗುವಂತೆ ಸರಕಾರ ಅನೇಕ ಯೋಜನೆಗಳು, ಕಾರ್ಯಕ್ರಮಗಳು ಹಾಗೂ ಕಾಯಿದೆಗಳನ್ನು ಜಾರಿಗೆ ತಂದಿದೆ. ಇವುಗಳು ಸಮರ್ಪಕವಾಗಿ ಅನುಷ್ಠಾನವಾದಾಗ ಮಾತ್ರ ಮಕ್ಕಳ ಅಭಿವೃದ್ದಿ ಸಾಧ್ಯ ಇದಕ್ಕೆ ಒತ್ತು ನೀಡಬೇಕು ಎಂದರು.

ಜಿಲ್ಲೆಯಲ್ಲಿ ನಿರಾಶ್ರಿತರ ಕೇಂದ್ರ ಸ್ಥಾಪನೆಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಕಳೆದ ಸಭೆಯಲ್ಲಿ ತೀಮಾನಿಸಲಾಗಿತ್ತು. ಆದರೂ ಇವರೆಗೂ ಅದಕ್ಕೆ ಸ್ಪಂದನೆ ಸಿಕ್ಕಿಲ್ಲ. ಸರಕಾರಕ್ಕೆ ಮತ್ತೊಮ್ಮೆ ಪತ್ರ ಬರೆಯಬೇಕು ಎಂದ ಅವರು, ಮಕ್ಕಳನ್ನು ಹೊತ್ತು ಭಿಕ್ಷಾಟನೆ ಮಾಡುತ್ತಿರುವ ಬಗ್ಗೆ ಕಂಡುಬಂದಲ್ಲಿ ಅಂತಹವರನ್ನು ನಿರಾಶ್ರಿತರ ಕೇಂದ್ರಕ್ಕೆ ಕಳುಹಿಸುವ ವ್ಯವಸ್ಥೆಯನ್ನು ಮಕ್ಕಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ಮತ್ತಿತರ ಇಲಾಖೆಯ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು.

ಗ್ರಾಮ ಹಾಗೂ ತಾಲೂಕು ಮಟ್ಟದ ಮಕ್ಕಳ ರಕ್ಷಣಾ ಸಮಿತಿಗಳು ನಿಯಮಿತವಾಗಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸಬೇಕು. ಆದರೆ 2025 ರ ಏಪ್ರಿಲ್ ನಿಂದ ಜೂನ್ ವರೆಗೆ 146 ಸಭೆಗಳು ನಡೆದಿದ್ದು, ಜುಲೈ ನಿಂದ ಈವರೆಗೆ 116 ಸಭೆಗಳು ಮಾತ್ರ ನಡೆದಿವೆ. ರಕ್ಷಣಾ ಸಮಿತಿಗಳು ಕಾಲಕಾಲಕ್ಕೆ ಸಭೆ ನಡೆಸಿ, ಮಕ್ಕಳ ರಕ್ಷಣಾ ಕ್ರಮಗಳ ಜಾರಿಗೆ ಮುಂದಾಗಬೇಕು ಎಂದರು.

ಜಿಲ್ಲೆಯಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಆಗದಂತೆ ಅಗತ್ಯವಿರುವ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಆದಾಗಿಯೂ ಪ್ರಕರಣ ಆದಲ್ಲಿ ಕಾನೂನು ರೀತಿಯ ಕ್ರಮಗಳನ್ನು ತಪ್ಪದೇ ಕೈಗೊಳ್ಳಬೇಕು ಎಂದ ಅವರು, ಬಾಲ್ಯವಿವಾಹ ನಿಷೇಧ ಹಾಗೂ ಪೊಕ್ಸೋ ಕಾಯ್ದೆಯ ಕುರಿತು ಅರಿವು ಕಾರ್ಯಕ್ರಮವನ್ನು ಹೆಚ್ಚು ಹೆಚ್ಚು ಆಯೋಜಿಸುವುದರೊಂದಿಗೆ ಇಂತಹ ಪ್ರಕರಣಗಳು ಆಗದಂತೆ ನೋಡಿಕೊಳ್ಳಬೇಕು ಎಂದರು.

ಶಾಲೆಯ ರಜಾ ದಿನಗಳಲ್ಲಿ, ಹಬ್ಬದ ಸಂದರ್ಭದಲ್ಲಿ ಮಕ್ಕಳು ಹೆಚ್ಚಾಗಿ ಭಿಕ್ಷಾಟನೆಗೆ ತೊಡಗುವ ಕುರಿತು ಆದಿಉಡುಪಿ ಹಾಗೂ ಹನುಮಂತನಗರ ವ್ಯಾಪ್ತಿಯಲ್ಲಿ ದೂರುಗಳು ಬರುತ್ತಿವೆ. ಈ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಾಲಾ ಆಡಳಿತ ಮಂಡಳಿಯು ನಿಗಾ ವಹಿಸಬೇಕು ಎಂದ ಅವರು, ಶಾಲಾ ಹಾಜರಾತಿಯಲ್ಲಿ ಹೆಚ್ಚು ಗೈರಾಗಿರುವ ಮಕ್ಕಳ ಮೇಲೆ ಗಮನಹರಿಸುವಂತೆ ಸೂಚನೆ ನೀಡಿದರು.

ಪ್ರಾಯೋಜಕತ್ವ ಯೋಜನೆಯಡಿ 2025 ರ ಏಪ್ರಿಲ್ ನಿಂದ ಜುಲೈ ವರೆಗೆ 392 ಫಲಾನುಭವಿಗಳಿಗೆ ಸಹಾಯಧನ ವಿತರಿಸಲಾಗಿದೆ ಎಂದ ಅವರು, ಹೊಸದಾಗಿ 141 ಅರ್ಜಿಗಳು ಬಂದಿದ್ದು, ಅರ್ಹರಿಗೆ ಈ ಯೋಜನೆಯ ಲಾಭ ದೊರಕುವಂತಾಗಬೇಕು ಎಂದರು.

ಇದೇ ಸಂದರ್ಭದಲ್ಲಿ ದತ್ತು ಮಾಸಾಚರಣೆಯ ಕುರಿತು ಭಿತ್ತಿಪತ್ರ ಹಾಗೂ ಮಕ್ಕಳ ಸಹಾಯವಾಣಿ- 1098 ಸಂಖ್ಯೆಯ ಸ್ಟಿಕ್ಕರ್‌ಗಳನ್ನು ಬಿಡುಗಡೆಗೊಳಿಸಲಾಯಿತು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಧಾಕರ್ ನಾಯಕ್, ಪೌರಾಯುಕ್ತ ಮಹಾಂತೇಶ ಹಂಗರಗಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಬಸವರಾಜ್ ಜಿ ಹುಬ್ಬಳ್ಳಿ, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ, ವಿವಿಧ ಇಲಾಖೆಯ ಅನುಷ್ಠಾನಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

KannadaExpress

Advertisement

ವಾರ್ತಾಪತ್ರಿಕೆ ಚಂದಾದಾರಿಕೆ

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ

ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ
Get In Touch

Editor Kannada Express 1st Floor, Raaj Towers Udupi - 576101

+919008424891

Kannadaexpress@gmail.com

Follow Us
Advertisements

© 2025 KannadaExpress. All Rights Reserved.
Design by GreyCrust Solutions