ಉಚ್ಚಿಲ ಬಡಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಪ್ರಮುಖ ಒಳರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆ ಉಂಟಾಗಿದೆ. ಮಳೆಯ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಿಂದ ಸಂಪರ್ಕ ಕಲ್ಪಿಸುವ ಬಹುತೇಕ ಒಳರಸ್ತೆಗಳು ಹಾನಿಗೊಳಗಾಗಿದ್ದು, ರಸ್ತೆಗಳಲ್ಲೆಲ್ಲ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿವೆ. ಕೆಲವೆಡೆ ಚರಂಡಿಗಳು ಹುಲ್ಲು ಹಾಗೂ ಗಿಡಗಂಟಿಗಳಿಂದ ಮುಚ್ಚಿಹೋಗಿದ್ದರೆ, ಇನ್ನೂ ಕೆಲವು ರಸ್ತೆಗಳು ಸಂಪೂರ್ಣ ಹಾಳಾಗಿ ವಾಹನ ಸಂಚಾರಕ್ಕೆ ಅಯೋಗ್ಯವಾಗಿವೆ.
ರಾಘವೇಂದ್ರ ಮಠ ಮಾರ್ಗವಾಗಿ ಸಮುದ್ರ ತೀರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ, ಪೊಲ್ಯ–ಬರ್ಪಾಣಿ ರಸ್ತೆ, ಅಲ್ ಪೊಲ್ಯ ರಸ್ತೆ, ಪೊಲ್ಯ ಮಸೀದಿ ರಸ್ತೆ, ಉಚ್ಚಿಲ ಚರ್ಚ್ ರಸ್ತೆ ಹಾಗೂ ಸುಭಾಷ್ ರೋಡ್ ಮೂಲಕ ಸಾಗುವ ಫಿಶರೀಸ್ ರಸ್ತೆ ಸೇರಿದಂತೆ ಹಲವು ಪ್ರಮುಖ ರಸ್ತೆಗಳ ಸ್ಥಿತಿ ಅತ್ಯಂತ ಕಳಪೆಯಾಗಿದ್ದು, ವಾಹನ ಸವಾರರು ಹಾಗೂ ಪಾದಚಾರಿಗಳು ನಿತ್ಯ ಅಪಾಯದ ನಡುವೆ ಸಂಚರಿಸುವಂತಾಗಿದೆ.
ರಸ್ತೆ ಗುಂಡಿಗಳಲ್ಲಿ ಮಳೆ ನೀರು ನಿಂತಿರುವುದರಿಂದ ದ್ವಿಚಕ್ರ ವಾಹನ ಸವಾರರಿಗೆ ಅಪಘಾತದ ಭೀತಿ ಹೆಚ್ಚಾಗಿದೆ. ಶಾಲಾ–ಕಾಲೇಜು ವಿದ್ಯಾರ್ಥಿಗಳು, ಉದ್ಯೋಗಿಗಳು ಹಾಗೂ ಸ್ಥಳೀಯ ನಿವಾಸಿಗಳು ಪ್ರತಿದಿನ ಸಂಕಷ್ಟ ಅನುಭವಿಸುತ್ತಿದ್ದು, ಕೂಡಲೇ ರಸ್ತೆ ದುರಸ್ತಿ ಕಾಮಗಾರಿ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಸ್ಥಳೀಯ ನಿವಾಸಿ ಶಫಿ ಉಚ್ಚಿಲ ಮಾತನಾಡಿ, "ರಸ್ತೆಗಳ ದುಸ್ಥಿತಿಯ ಬಗ್ಗೆ ಹಲವು ಬಾರಿ ಗ್ರಾಮ ಪಂಚಾಯಿತಿ ಹಾಗೂ ಸಂಬಂಧಿತ ಅಧಿಕಾರಿಗಳ ಗಮನಕ್ಕೆ ತಂದರೂ ಶಾಶ್ವತ ಪರಿಹಾರ ಕಂಡುಹಿಡಿದಿಲ್ಲ. ಪ್ರತಿದಿನ ನೂರಾರು ವಾಹನಗಳು ಸಂಚರಿಸುವ ಈ ರಸ್ತೆಗಳನ್ನು ನಿರ್ಲಕ್ಷ್ಯ ಮಾಡಿರುವುದು ಅಧಿಕಾರಿಗಳ ಬೇಜವಾಬ್ದಾರಿತನವನ್ನು ತೋರಿಸುತ್ತದೆ" ಎಂದು ಆರೋಪಿಸಿದರು.
ಹದಗೆಟ್ಟ ರಸ್ತೆಗಳನ್ನು ತಕ್ಷಣ ದುರಸ್ತಿಗೊಳಿಸಿ ಸಾರ್ವಜನಿಕರಿಗೆ ಸುರಕ್ಷಿತ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಬೇಕು. ಇಲ್ಲವಾದರೆ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಸ್ಥಳೀಯರು ಎಚ್ಚರಿಕೆ ನೀಡಿದ್ದಾರೆ.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
+919008424891
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions