ಮಲ್ಪೆ ಮಹಾಲಕ್ಷ್ಮಿ ಕೋ–ಆಪರೇಟಿವ್ ಬ್ಯಾಂಕ್‌ನಲ್ಲಿ ಕೋವಿಡ್ ಅವಧಿಯಲ್ಲಿ ನಡೆದಿರುವ ಸಾಲ ಹಗರಣ ಹಾಗೂ ಬ್ಯಾಂಕ್‌ನಿಂದ ಆಗಿರುವ ಅನ್ಯಾಯದ ವಿರುದ್ಧ ಸಂತ್ರಸ್ತರು ಸೋಮವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದರು.
ಮಲ್ಪೆ ಮಹಾಲಕ್ಷ್ಮಿ ಕೋ–ಆಪರೇಟಿವ್ ಬ್ಯಾಂಕ್‌ನಿಂದ ಯಾವುದೇ ಸಾಲ ಪಡೆಯದೇ ಇದ್ದರೂ ತಮ್ಮ ಹೆಸರಿಗೆ ಸಾಲ ತೋರಿಸಿ ಮೋಸ ಮಾಡಲಾಗಿದೆ. ಈ ಕುರಿತು ಕಳೆದ ಎರಡು ವರ್ಷಗಳಿಂದ ಹೋರಾಟ ನಡೆಸಿಕೊಂಡು ಬಂದಿದ್ದರೂ ಇನ್ನೂ ನ್ಯಾಯ ದೊರೆತಿಲ್ಲ ಎಂದು ಸಂತ್ರಸ್ತರು ಆಕ್ರೋಶ ವ್ಯಕ್ತಪಡಿಸಿದರು.
ಧರಣಿಯಲ್ಲಿ ಮಾತನಾಡಿದ ಹೋರಾಟಗಾರ ಕೋಟ ನಾಗೇಂದ್ರ ಪುತ್ರನ್, ಮಲ್ಪೆ ಮಹಾಲಕ್ಷ್ಮಿ ಕೋ–ಆಪರೇಟಿವ್ ಬ್ಯಾಂಕ್‌ನಲ್ಲಿ ನಡೆದಿರುವ ಹಗರಣ ಹಾಗೂ ಅನ್ಯಾಯದ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಕರ್ನಾಟಕ ಸರ್ಕಾರ 64ನೇ ವಿಧಿಯಡಿ ತನಿಖೆಗೆ ಆದೇಶಿಸಿ ಒಂದು ವರ್ಷ ಕಳೆದಿದೆ. ಆದರೆ ಇದುವರೆಗೂ ಸಮರ್ಪಕ ತನಿಖೆ ನಡೆಯದೆ ಸಂತ್ರಸ್ತರಿಗೆ ಅನ್ಯಾಯ ಮುಂದುವರಿದಿದೆ ಎಂದು ಆರೋಪಿಸಿದರು.

ಉಡುಪಿ ಸಹಕಾರಿ ಸಂಘಗಳ ಉಪನಿಬಂಧಕಿ ಲಾವಣ್ಯ ಅವರು ತನಿಖೆಯನ್ನು ಉದ್ದೇಶಪೂರ್ವಕವಾಗಿ ವಿಳಂಬ ಮಾಡುತ್ತಿದ್ದಾರೆ. ಭ್ರಷ್ಟಾಚಾರ ಪ್ರಕರಣದಲ್ಲಿ ಅಮಾನತುಗೊಂಡಿರುವ ಮಂಜುನಾಥ್ ಸಿಂಗ್ ಅವರೊಂದಿಗೆ ಸೇರಿ ವಿಚಾರಣೆ ನಡೆಸಿರುವುದು ಸಂಶಯಕ್ಕೆ ಕಾರಣವಾಗಿದೆ ಎಂದರು. ಸರ್ಕಾರವು 60 ದಿನಗಳೊಳಗೆ ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಆದೇಶಿಸಿದ್ದರೂ, ಇದುವರೆಗೂ ತನಿಖೆ ಮುಕ್ತಾಯಗೊಂಡಿಲ್ಲ ಎಂದು ಹೇಳಿದರು.
ತನಿಖೆಯನ್ನು ವಿಳಂಬಗೊಳಿಸುವ ಮೂಲಕ ಬ್ಯಾಂಕ್‌ನಿಂದ ಸಾಲ ಪಡೆಯದೇ ಇದ್ದ ಸಂತ್ರಸ್ತರನ್ನು ನ್ಯಾಯಾಲಯದ ಪ್ರಕ್ರಿಯೆಗಳಲ್ಲಿ ಸಿಲುಕಿಸಿ, ಜಾಮೀನು ಪಡೆಯುವಂತಹ ಪರಿಸ್ಥಿತಿಗೆ ತಳ್ಳಲಾಗಿದೆ. ಇದರಿಂದ ಸಂತ್ರಸ್ತರು ತೀವ್ರ ಮಾನಸಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ಅವರು ಆರೋಪಿಸಿದರು.
64ನೇ ವಿಧಿಯಡಿ ನಡೆಸಬೇಕಾದ ತನಿಖೆಯನ್ನು 60 ದಿನಗಳಲ್ಲಿ ಪೂರ್ಣಗೊಳಿಸದೆ ಒಂದು ವರ್ಷ ಒಂದು ತಿಂಗಳ ಬಳಿಕ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ. ಸಾಲಕ್ಕೆ ಸಹಿ ಹಾಕದೇ ಇರುವ ಸುಮಾರು 30 ಮಂದಿಯ ಸಹಿಗಳನ್ನು ಇನ್ನೂ ವಿಧಿ ವಿಜ್ಞಾನ ಪರೀಕ್ಷೆಗೆ ಕಳುಹಿಸದೇ ವಿಳಂಬ ಮಾಡಲಾಗುತ್ತಿದೆ ಎಂದು ದೂರಿದರು.
ಧರಣಿ ಸ್ಥಳಕ್ಕೆ ಆಗಮಿಸಿದ ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ಅವರಿಗೆ ಸಂತ್ರಸ್ತರು ಮನವಿ ಸಲ್ಲಿಸಿದರು. ಈ ಸಂಬಂಧ ಜನವರಿ 9ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ವಿಷಯವನ್ನು ಗಮನಕ್ಕೆ ತರಲಾಗುವುದು ಎಂದು ಅವರು ಭರವಸೆ ನೀಡಿದರು.
ಉಡುಪಿ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್, ಅಪರ ಜಿಲ್ಲಾಧಿಕಾರಿ ಆಬೀದ್ ಗದ್ಯಾಳ್ ಸ್ಥಳಕ್ಕೆ ಆಗಮಿಸಿ ಸಂತ್ರಸ್ತರಿಂದ ಮನವಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಉಡುಪಿ ಸಹಕಾರಿ ಸಂಘಗಳ ಉಪನಿಬಂಧಕಿ ಲಾವಣ್ಯ ಹಾಜರಿದ್ದರು.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
+919008424891
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions