Advertisement

ಶಿವಮೊಗ್ಗದಲ್ಲಿ ವಿದ್ಯಾರ್ಥಿ ಹತ್ಯೆ, ಕುಟುಂಬಕ್ಕೆ ₹15 ಲಕ್ಷ ಪರಿಹಾರ, ಗರಿಷ್ಠ ಶಿಕ್ಷೆಗೆ ಕ್ರಮ – ಸಿಎಂ ಸಿದ್ದರಾಮಯ್ಯ

ಶಿವಮೊಗ್ಗ ನಗರದ ಸಮೀಪದ ಊರುಗಡೂರಿನಲ್ಲಿ ಶಾಲಾ ವಿದ್ಯಾರ್ಥಿಯನ್ನು ಥಳಿಸಿ ಹತ್ಯೆಗೈದಿರುವ ಘಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. ಮೃತ ವಿದ್ಯಾರ್ಥಿಯ ಕುಟುಂಬಕ್ಕೆ ಸರ್ಕಾರದಿಂದ 15 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಘೋಷಿಸಿ, ಪ್ರಕರಣದಲ್ಲಿ ಭಾಗಿಯಾದ ಪ್ರತಿಯೊಬ್ಬ ಅಪರಾಧಿಗೂ ಕಾನೂನಿನ ಮೂಲಕ ತಕ್ಕ ಶಿಕ್ಷೆಯಾಗುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

ಕೊಲೆಯಲ್ಲಿ ಭಾಗಿಯಾದವರು ಚಿಕ್ಕಪ್ರಾಯದ ಹುಡುಗರು ಎನ್ನುವ ಮಾಹಿತಿ ದಿಗ್ಭ್ರಮೆ ಉಂಟುಮಾಡಿದೆ ಎಂದು ಹೇಳಿದ ಅವರು, ಓದಿ ಭವಿಷ್ಯ ರೂಪಿಸಬೇಕಾದ ಮಕ್ಕಳು ದುಶ್ಚಟಗಳಿಗೆ ಬಲಿಯಾಗಿ ಅಪರಾಧ ಕೃತ್ಯಗಳಲ್ಲಿ ತೊಡಗುವುದು ದುರದೃಷ್ಟಕರ ಬೆಳವಣಿಗೆ ಎಂದು ವಿಷಾದಿಸಿದರು. ಕೊಲೆಯ ಹಿಂದಿನ ಉದ್ದೇಶವೇನೇ ಇರಲಿ, ತಪ್ಪಿತಸ್ಥರು ಯಾರೇ ಆಗಿರಲಿ ಅವರನ್ನು ಕಾನೂನಿನ ಮೂಲಕ ಹೆಡೆಮುರಿ ಕಟ್ಟಿ, ಭವಿಷ್ಯದಲ್ಲಿ ಇಂತಹ ಕೃತ್ಯಗಳನ್ನು ಎಸಗುವ ಮುನ್ನ ನೂರು ಬಾರಿ ಯೋಚಿಸಬೇಕಾದಂತಹ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ.

ಬಾಲ್ಯದಲ್ಲೇ ದ್ವೇಷ, ಹಿಂಸೆ ಮತ್ತು ಅಪರಾಧ ಮನೋಭಾವ ಬೆಳೆಸಿಕೊಳ್ಳುವುದು ಸಮಾಜಕ್ಕೆ ಅಪಾಯಕಾರಿ ಎಂದೂ ಸಿಎಂ ಎಚ್ಚರಿಸಿದ್ದಾರೆ. ಪೋಷಕರು ತಮ್ಮ ಮಕ್ಕಳ ಚಲನವಲನಗಳ ಮೇಲೆ ನಿಗಾ ವಹಿಸಿ, ತಪ್ಪು ದಾರಿಯಲ್ಲಿ ಹೋಗದಂತೆ ತಿದ್ದಿ ಬುದ್ದಿ ಹೇಳಬೇಕು ಎಂದು ಸಲಹೆ ನೀಡಿದ್ದಾರೆ. ಶಾಲಾ ಪರಿಸರದಲ್ಲಿ ಕಾನೂನುಬಾಹಿರ ಕೃತ್ಯಗಳು ನಡೆಯದಂತೆ ಆಡಳಿತ ಮಂಡಳಿ ಕಟ್ಟುನಿಟ್ಟಿನ ನಿಗಾ ವಹಿಸಬೇಕು ಹಾಗೂ ಅಗತ್ಯವಿದ್ದಲ್ಲಿ ಪೊಲೀಸರ ನೆರವು ಪಡೆಯಬೇಕು ಎಂದು ತಿಳಿಸಿದ್ದಾರೆ.

ಇದೀಗ ಪ್ರಕರಣದಲ್ಲಿ ಭಾಗಿಯಾದ ಎಲ್ಲ ಆರೋಪಿಗಳನ್ನು ಬಂಧಿಸಲಾಗಿದ್ದು, ನಿಷ್ಪಕ್ಷಪಾತ ತನಿಖೆ ನಡೆಸಿ ಗರಿಷ್ಠ ಶಿಕ್ಷೆಯಾಗುವಂತೆ ಕ್ರಮ ಕೈಗೊಳ್ಳುವ ಭರವಸೆಯನ್ನು ನೊಂದ ಕುಟುಂಬಕ್ಕೆ ನೀಡಿದ್ದಾರೆ. ಇದೇ ವೇಳೆ ಸಾರ್ವಜನಿಕರು ಯಾವುದೇ ಪ್ರಚೋದನೆಗಳಿಗೆ ಕಿವಿಗೊಡದೆ ಶಾಂತಿ ಹಾಗೂ ಸಂಯಮದಿಂದ ವರ್ತಿಸಬೇಕೆಂದು ಮನವಿ ಮಾಡಿದ ಅವರು, ಪರಿಸ್ಥಿತಿಯನ್ನು ದುರ್ಬಳಕೆ ಮಾಡಿಕೊಂಡು ಸಾರ್ವಜನಿಕ ಶಾಂತಿಗೆ ಭಂಗ ಉಂಟುಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

KannadaExpress

Advertisement

ವಾರ್ತಾಪತ್ರಿಕೆ ಚಂದಾದಾರಿಕೆ

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ

ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ
Get In Touch

Editor Kannada Express 1st Floor, Raaj Towers Udupi - 576101

+919008424891

Kannadaexpress@gmail.com

Follow Us
Advertisements

© 2025 KannadaExpress. All Rights Reserved.
Design by GreyCrust Solutions