Advertisement

ಕರಾವಳಿ ಜಿಲ್ಲೆಗಳ ಸರ್ವತೋಮುಖ ಅಭಿವೃದ್ಧಿಗೆ ಇಂಬು ನೀಡಿದ ರಾಜ್ಯ ಸರ್ಕಾರ :ಎಂ.ಎ ಗಫೂರ್

ಕರಾವಳಿ ಅಭಿವೃದ್ಧಿ ಪ್ರಾಧಿಕಾರವನ್ನು ಕರಾವಳಿ ಅಭಿವೃದ್ಧಿ ಮಂಡಳಿಯನ್ನಾಗಿ ಮೇಲ್ದರ್ಜೆಗೇರಿಸುವ ಮೂಲಕ ರಾಜ್ಯ ಸರ್ಕಾರವು ಕರಾವಳಿಯ ಮೂರು ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಸರ್ವತೋಮುಖ ಅಭಿವೃದ್ಧಿಗೆ ಶಕ್ತಿ ನೀಡಿದೆ ಎಂದು ಮಂಗಳೂರು ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್ ಹೇಳಿದರು.

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಕರಾವಳಿ ಅಭಿವೃದ್ಧಿ ಮಂಡಳಿಯ ಸರ್ವ ಸದಸ್ಯರ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಕರಾವಳಿ ಅಭಿವೃದ್ಧಿ ಮಂಡಳಿಯನ್ನಾಗಿ ಮೇಲ್ದರ್ಜೆಗೇರಿಸಿರುವ ಹಿನ್ನೆಲೆ, ಮುಂದಿನ ದಿನಗಳಲ್ಲಿ ಮಂಡಳಿಗೆ ಹೆಚ್ಚು ಅನುದಾನ ಬಿಡುಗಡೆ ಆಗುವ ನಿರೀಕ್ಷೆಯಿದ್ದು, ಇದರಿಂದ ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚು ಹೆಚ್ಚು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶ ಮಾಡಿಕೊಟ್ಟಂತಾಗಿದೆ ಎಂದ ಅವರು, ಕರಾವಳಿ ತೀರದ ಜಿಲ್ಲೆಗಳಲ್ಲಿ ಮೂಲಭೂತ ಸೌಲಭ್ಯ ಒದಗಿಸಲು ಹಾಗೂ ಸ್ಥಳೀಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಅಭಿಪ್ರಾಯ ಪಡೆದು ಯೋಜನೆ ರೂಪಿಸಿ ಅನುಷ್ಠಾನಗೊಳಿಸಲಾಗುವುದು ಎಂದರು.

ಉಡುಪಿಯ 5, ದಕ್ಷಿಣ ಕನ್ನಡದ 8 ಹಾಗೂ ಉತ್ತರ ಕನ್ನಡದ 6 ವಿಧಾನಸಭಾ ಕ್ಷೇತ್ರ ಸೇರಿದಂತೆ ಒಟ್ಟು 19 ವಿಧಾನಸಭಾ ಕ್ಷೇತ್ರಗಳನ್ನೊಳಗೊಂಡಂತೆ ಕರಾವಳಿ ಅಭಿವೃದ್ಧಿ ಮಂಡಳಿ ರಚನೆ ಆಗಿದೆ. ಈ ಹಿಂದೆ ಮಲ್ನಾಡು ಅಭಿವೃದ್ಧಿ ಮಂಡಳಿಯಲ್ಲಿದ್ದ ಕಾರ್ಕಳ, ಬೆಳ್ತಂಗಡಿ, ಮೂಡಬಿದ್ರೆ, ಸುಳ್ಯ ಹಾಗೂ ಪುತ್ತೂರು ಕರಾವಳಿ ಅಭಿವೃದ್ಧಿ ಮಂಡಳಿಗೆ ಸೇರಿದೆ. ಕರಾವಳಿಯ ವಿವಿಧ ಅಭಿವೃದ್ಧಿ ಇಲಾಖೆಗಳು, ಜಿಲ್ಲಾ ಪಂಚಾಯತಿಗಳು ಮತ್ತು ಮಂಡಳಿಯಿಂದ ಮಾನ್ಯತೆ ಪಡೆದ ಸರ್ಕಾರೇತರ ಸಂಸ್ಥೆಗಳು ಯೋಜನೆಗೆ ಅನುಸಾರವಾಗಿ ರೂಪಿಸಿದ ಕಾರ್ಯಕ್ರಮಗಳನ್ನು ಮಂಡಳಿಯು ಅನುಮೋದಿಸಲಿದೆ ಎಂದರು.

ಪ್ರಸ್ತುತ ಸಾಲಿನಲ್ಲಿ ಆಯವ್ಯಯದಲ್ಲಿ ಕರಾವಳಿಯ ಮೂರು ಜಿಲ್ಲೆಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು 1050 ಲಕ್ಷ ರೂ. ಮೊತ್ತದ ಅನುದಾನವನ್ನು ಕಾಯ್ದಿರಿಸಲಾಗಿದೆ. ಈ ವಾರ್ಷಿಕ ಸಾಲಿನ ಕ್ರಿಯಾ ಯೋಜನೆಯಲ್ಲಿ 1082.55 ಲಕ್ಷ ರೂ. ಮೊತ್ತದ ಒಟ್ಟು 153 ಅಭಿವೃದ್ಧಿ ಕಾಮಗಾರಿಗಳನ್ನು ಕ್ರಿಯಾ ಯೋಜನೆಯಲ್ಲಿ ಅನುಮೋದಿಸಲಾಗಿದೆ ಎಂದ ಅವರು, ಕಳೆದ ಸಾಲಿನ ಮುಂದುವರೆದ ಕಾಮಗಾರಿಗಳು ಪ್ರಗತಿಯಲ್ಲಿರುವುದಾಗಿ ಸಭೆಗೆ ಮಾಹಿತಿ ನೀಡಿದರು.

ರಾಜ್ಯವು 320 ಕಿ.ಮೀ ಉದ್ದದ ಕರಾವಳಿ ತೀರವನ್ನು ಹೊಂದಿರುವುದರಿಂದ ಪ್ರವಾಸೋದ್ಯಮ, ಪರಿಸರ ಪ್ರವಾಸೋದ್ಯಮ, ಬಂದರು ಅಭಿವೃದ್ಧಿ, ಬೀಚ್‌ಗಳಲ್ಲಿ ಪ್ರವಾಸಿಗರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಶೌಚಾಲಯ, ಕುಡಿಯುವ ನೀರು ಸೇರಿದಂತೆ ಮತ್ತಷ್ಟು ಹೆಚ್ಚಿನ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಚಿಂತನೆ ನಡೆಸಲಾಗಿದೆ ಎಂದ ಅವರು ಮುಂದಿನ ದಿನಗಳಲ್ಲಿ ಹಿನ್ನೀರು ಪ್ರದೇಶಗಳ ಸಂರಕ್ಷಣೆಯ ಜೊತೆಗೆ ಅಭಿವೃದ್ಧಿ ಚಟುವಟಿಕೆಗಳನ್ನು ಕೈಗೆತ್ತಿಕೊಂಡು ಕಾರ್ಯರೂಪಕ್ಕೆ ತರುವುದರೊಂದಿಗೆ ಪ್ರವಾಸೋದ್ಯಮ ಕ್ಷೇತ್ರವನ್ನು ಮತ್ತಷ್ಟು ಬಲಗೊಳಿಸಲಾಗುವುದು ಎಂದರು.

ಉಡುಪಿ ಜಿಲ್ಲೆಯು ಧಾರ್ಮಿಕ ಕ್ಷೇತ್ರವಾಗಿರುವ ಹಿನ್ನೆಲೆ, ಹೊರ ಜಿಲ್ಲೆ, ರಾಜ್ಯ, ದೇಶಗಳಿಂದ ಸಾಕಷ್ಟು ಪ್ರವಾಸಿಗರು ಆಗಮಿಸುತ್ತಾರೆ. ಅವರುಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪ್ರವಾಸೋದ್ಯಮದ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದ ಅವರು, ಬೀಚ್‌ಗಳ ಅಭಿವೃದ್ಧಿಗೆ ಗೋವಾ-ಕೇರಳ ಮಾದರಿಯನ್ನು ಅಳವಡಿಸಿಕೊಳ್ಳಲು ಚರ್ಚೆ ನಡೆಸಲಾಗುವುದು ಎಂದು ಸಮಿತಿಯ ಸದಸ್ಯರುಗಳಾದ ಯಶ್‌ಪಾಲ್ ಎ ಸುವರ್ಣ ಅವರು, ಕರಾವಳಿ ಜಿಲ್ಲೆಗಳ ಸೆಂಟರ್ ಉಡುಪಿಯಾಗಿರುವುದರಿಂದ ಜಿಲ್ಲೆಯಲ್ಲಿ ಮಂಡಳಿಯ ಕೇಂದ್ರ ಕಚೇರಿಯನ್ನು ತೆರೆಯುವಂತೆ ಹಾಗೂ ಸುನಿಲ್ ಕುಮಾರ್ ಅವರು, ಜಿಲ್ಲೆಯಲ್ಲಿ ಶಾಶ್ವತ ಕಾಮಗಾರಿಗಳನ್ನು ರಚಿಸಿ, ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸಲಹೆ ನೀಡಿದರು.

ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಮಾತನಾಡಿ, ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣವನ್ನು ನಂದಿಕೂರು ಬೆಳಪು ಪರಿಸರದಲ್ಲಿ ಕರ್ನಾಟಕ ಸ್ಟೇಟ್ ಕ್ರಿಕೆಟ್ ಅಸೋಸಿಯೇಷನ್ ಸಹಭಾಗಿತ್ವದಲ್ಲಿ ನಿರ್ಮಿಸಲು ಮಾಸ್ಟರ್ ಪ್ಲಾನ್ ರೂಪಿಸಲಾಗಿದ್ದು, ಅತ್ಯಾಧುನಿಕ ಮೂಲಭೂತ ಸೌಕರ್ಯದೊಂದಿಗೆ ಹೆಚ್ಚು ಪ್ರೇಕ್ಷಕರು ಆಸೀನರಾಗಲು ಹಾಗೂ ಸಾವಿರಾರು ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆಯನ್ನು ಕಲ್ಪಿಸಲು ಚಿಂತನೆ ನಡೆಸಲಾಗಿದೆ. ಕೆ.ಎಸ್.ಸಿ.ಎ ಅವರು ಸ್ಥಳ ಪರಿಶೀಲಿಸಿದ ನಂತರ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಮೊದಲ ಹಂತದಲ್ಲಿ ಓವರ್ ಹೆಡ್ ಮೆಟ್ರೋ ಕಾಮಗಾರಿ ಯೋಜನೆಯನ್ನು ಮಂಗಳೂರು-ಉಡುಪಿ-ಮಣಿಪಾಲ ಮಾರ್ಗವಾಗಿ ಹಾಗೂ ಎರಡನೇ ಹಂತದಲ್ಲಿ ಹೆಜಮಾಡಿ-ಕಾರ್ಕಳ ಮಾರ್ಗವಾಗಿ ಕೈಗೊಳ್ಳಲು ಯೋಜನೆ ರೂಪಿಸಿ, ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು. ಸಭೆಯಲ್ಲಿ ಶಾಸಕ ಎ ಕಿರಣ್ ಕುಮಾರ್ ಕೊಡ್ಗಿ, ಕಾರ್ಯದರ್ಶಿ ಪ್ರದೀಪ್ ಡಿ ಸೋಜಾ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

KannadaExpress

Advertisement

ವಾರ್ತಾಪತ್ರಿಕೆ ಚಂದಾದಾರಿಕೆ

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ

ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ
Get In Touch

Editor Kannada Express 1st Floor, Raaj Towers Udupi - 576101

+919008424891

Kannadaexpress@gmail.com

Follow Us
Advertisements

© 2025 KannadaExpress. All Rights Reserved.
Design by GreyCrust Solutions